ಕೊಡಗು:- ರಾಜ್ಯದಲ್ಲಿ ಇಂದಿನಿಂದ 3-4ದಿನಗಳ ಕಾಲ ಉತ್ತಮ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, ಜುಲೈ 11 ರವರೆಗೂ ಮಳೆ ಅಬ್ಬರಿಸಲಿದೆ. ಜುಲೈ 8 ಹಾಗೂ 9 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಹಾಗೆಯೇ,ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ ಸೇರಿ ಇತರ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿತ ಘಟನೆಗಳು ನಡೆದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆ ನಡೆದಂತೆ, ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಅವರು ಆದೇಶ ಹೊರಡಿಸಿದ್ದಾರೆ.