ಬೆಳಗಾವಿ:- ಇಂದು (ಮೇ 12) ಪ್ರಾರ್ಥನೆಗೆಂದು ಬಂದಾಗ ಜಿಲ್ಲೆಯ ಸಂತಿ ಬಸ್ತವಾಡ ಗ್ರಾಮದ ಮಸೀದಿಯಲ್ಲಿ ಪವಿತ್ರ ಗ್ರಂಥ ಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುವುದು ಕಂಡು ಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಭೇಟಿ ನೀಡಿ ಪರಿಶೀಲನೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ತಡರಾತ್ರಿ ಮಸೀದಿಯೊಳಗಿನ ಕುರಾನ್ ಕದ್ದು ಕೊಂಡೊಯ್ದಿದ್ದಾರೆ. ಬಳಿಕ ಪವಿತ್ರ ಗ್ರಂಥವನ್ನು ಸುಟ್ಟು ಹಾಕಿದ್ದಾರೆಂಬ ಮಾಹಿತಿ ಇದೆ, ಆರೋಪಿಗಳ ಬಂಧನಕ್ಕಾಗಿ ಈಗಾಗಲೇ ತಂಡ ರಚನೆ ಮಾಡಲಾಗಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸುತ್ತೇವೆ. ಸದ್ಯ ಯುವಕರು ಪ್ರತಿಭಟನೆ ಮಾಡಲು ಅವಕಾಶ ಕೇಳಿದ್ದಾರೆ. ಈ ಸಮಯದಲ್ಲಿ ಪ್ರತಿಭಟನೆ ಬೇಡ ಎಂದು ಮನವಿ ಮಾಡಿದ್ದೇವೆ. ಅವರು ಸಾಂಕೇತಿಕವಾಗಿ ಪ್ರತಿಭಟನೆ ಮಾಡಲಿದ್ದಾರೆ ಎಂದರು.
ಸಂತಿ ಬಸ್ತವಾಡ ಗ್ರಾಮದಲ್ಲಿ ಕುರಾನ್ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಮುಸ್ಲಿಮರು ದಿಢೀರ್ ಪ್ರತಿಭಟನೆ ನಡೆಸಿದ್ದಾರೆ. ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಪ್ರತಿಭಟನೆ ಕೈಬಿಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಹಿನ್ನೆಲೆಯಲ್ಲಿ ಪೊಲೀಸ್ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.