ಬೆಂಗಳೂರು

ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ

ಬೆಂಗಳೂರು:- ಕರ್ನಾಟಕದಲ್ಲಿ ಕೊರೊನಾ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗಿ ಜನರಲ್ಲಿ ಆತಂಕ ಮನೆ ಮಾಡಿದೆ. ಕರ್ನಾಟಕದಲ್ಲಿ ಕೊವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆದಿದೆ. ಕೋವಿಡ್ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.

ಕೊರೊನಾ ನಿಯಂತ್ರಣಕ್ಕೆ ಎಲ್ಲ ಸಿದ್ಧತೆಗಳನ್ನ ಮಾಡಿಕೊಳ್ಳಿ, ಕಳೆದ ಬಾರಿ ಆದಂತೆ ಸಮಸ್ಯೆ ಆಗಬಾರದು. ಕೊವಿಡ್ ಸಹಾಯವಾಣಿ ತೆರೆಯಿರಿ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ್ದಾರೆ. ಅಲ್ಲದೇ ಜ್ವರ, ನೆಗಡಿ ಇರುವ ಮಕ್ಕಳಿಗೆ ಶಾಲೆಗಳು ರಜೆ ನೀಡುವಂತೆ ಸೂಚಿಸಿದ್ದಾರೆ. ಪ್ರತಿ ವಾರ ಕೊವಿಡ್ ಟಾಸ್ಕ್ ಫೋರ್ಸ್ ಸಭೆ ನಡೆಸಿ ಪರಿಸ್ಥಿತಿ ಅವಲೋಕಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.

*ಸದ್ಯಕ್ಕೆ ಕೊರೊನಾ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ. ಆದರೆ, ಮುಂಚಿತವಾಗಿಯೇ ಮುಂದೆ ಸಂಭವಿಸಬಹುದಾದ ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯವಾದ ಎಲ್ಲಾ ಸವಲತ್ತು, ಸಲಕರಣೆಗಳನ್ನು ಸಜ್ಜುಗೊಳಿಸಿಟ್ಟುಕೊಳ್ಳಬೇಕು.

*ಸದ್ಯಕ್ಕೆ ಗಂಭೀರ ಪರಿಸ್ಥಿತಿಗೆ ತಲುಪಿಲ್ಲವಾದರೂ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು.

ವಯಸ್ಸಾದವರು, ಗರ್ಭಿಣಿಯರು, ಹೃದಯ ಸಂಬಂಧಿ, ಶ್ವಾಸಕೋಶ ಸಮಸ್ಯೆ ಇರುವವರು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸುವುದು ಒಳ್ಳೆಯದು. ಈ ಬಗ್ಗೆ ಅರಿವು ಮೂಡಿಸಬೇಕು. ಪ್ರತೀ ವಾರ ಅಥವಾ ಅಗತ್ಯ ಬಿದ್ದರೆ ಮೂರು ದಿನಕ್ಕೊಮ್ಮೆ ಪರಿಸ್ಥಿತಿಯ ಪರಿಶೀಲನೆ ನಡೆಸುತ್ತಾ ತೀವ್ರ ನಿಗಾ ಇಡಬೇಕು.

ಗರ್ಭಿಣಿಯರಲ್ಲಿ ಆರೋಗ್ಯ ಸಮಸ್ಯೆ ಕಂಡುಬಂದರೆ ಅವರನ್ನು ಒಂದು ಆಸ್ಪತ್ರೆಯಿಂದ ಮತ್ತೊಂದು ಆಸ್ಪತ್ರೆಗೆ ವರ್ಗಾಯಿಸುವುದನ್ನು ನಿಲ್ಲಿಸಿ, ಎಲ್ಲಾ ಆಸ್ಪತ್ರೆಗಳಲ್ಲೂ ಅಗತ್ಯ ವ್ಯವಸ್ಥೆ ಮಾಡಿಕೊಂಡಿರಬೇಕು.

ಶೀತ, ನೆಗಡಿ, ಜ್ವರ ಇರುವ ಮಕ್ಕಳನ್ನು ಪೋಷಕರು ಶಾಲೆಗೆ ಕಳುಹಿಸದಿರುವುದು ಉತ್ತಮ. ಶಾಲೆಗಳೂ ಈ ಬಗ್ಗೆ ಗಮನ ಹರಿಸಿ ಶೀತ, ನೆಗಡಿ ಇರುವ ಮಕ್ಕಳನ್ನು ವಾಪಾಸ್ ಪೋಷಕರ ಮೂಲಕ ಮನೆಗೆ ಕಳುಹಿಸಬೇಕು. ಎಂತಹುದೇ ಪರಿಸ್ಥಿತಿ ಎದುರಿಸಲು ಸರ್ವ ಸನ್ನದ್ಧವಾಗಿರಬೇಕು.

ಕಳೆದ ಜನವರಿಯಿಂದಲೂ ಕೊರೊನಾ ಪ್ರಕರಣಗಳು ಅಲ್ಲಲ್ಲಿ ಒಂದೊ – ಎರಡು ಕಾಣಬರುತ್ತಿದ್ದು, ಮೇ ತಿಂಗಳಲ್ಲಿ ಉಲ್ಬಣವಾಗಿದ್ದು ಮೇ ತಿಂಗಳ ನಾಲ್ಕನೇ ವಾರಕ್ಕೆ 62 ಪ್ರಕರಣಗಳು ವರದಿಯಾಗಿವೆ. ಆದರೆ, ಗಂಭೀರ ಎನ್ನುವಂತಹ ಪ್ರಕರಣಗಳ ಸಂಖ್ಯೆ ಒಂದು ಮಾತ್ರ ಇದೆ.

ಎಸ್‌ಎಆರ್‌ಐ ಪ್ರಕರಣಗಳಲ್ಲಿ ತಪಾಸಣೆ ಕಾರ್ಯ ಈಗಾಗಲೇ ನಡೆಯುತ್ತಿದೆ. ನೆರೆಯ ರಾಜ್ಯಗಳಾದ ಕೇರಳದಲ್ಲಿ 95, ತಮಿಳು ನಾಡಿನಲ್ಲಿ 66, ಮಹಾರಾಷ್ಟ್ರಗಳಲ್ಲಿ 56 ಪ್ರಕರಣಗಳು ವರದಿಯಾಗಿವೆ.