ಬೆಂಗಳೂರು:- ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆನ್ನಿಗೆ ಹಿಂದುಳಿದ ವರ್ಗಗಳ ನಾಯಕರು ಗಟ್ಟಿಯಾಗಿ ನಿಂತಿದ್ದೇವೆ ಎಂಬ ಸಂದೇಶವನ್ನು ರವಾನೆ ಮಾಡಲಾಗಿದೆ.
5 ವರ್ಷವೂ ನಾನೇ ಸಿಎಂ, 2028ರ ಚುನಾವಣೆಯೂ ನನ್ನ ನೇತೃತ್ವದಲ್ಲೇ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ದಿಲ್ಲಿಯಲ್ಲಿ ಗುಡುಗಿದ್ದರು. ಈಗ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಬೆಂಗಳೂರಿನಲ್ಲಿರುವಾಗಲೇ ಸಿಎಂ ಬೆಂಬಲಕ್ಕೆ ಹಿಂದುಳಿದ ನಾಯಕರು ಇರುವ ಹೇಳಿಕೆಯನ್ನು ರವಾನೆ ಮಾಡಲಾಗಿದೆ. ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಮಂಡಳಿ ಸಭೆ ಬಳಿಕ ಮಾಧ್ಯಮದೆದುರು ಹಿಂದುಳಿದ ನಾಯಕರು ಧ್ವನಿ ಎತ್ತಿದ್ದಾರೆ.
ಸಿಎಂ ಸ್ಥಾನದಿಂದ ಅವರನ್ನು ಬದಲಾಯಿಸುವ ಮಾತುಗಳು ಕೇಳಿಬರುತ್ತಿವೆ ಎಂಬ ಸುದ್ದಿಗಾರರು ಪ್ರಶ್ನೆಗೆ ಎಐಸಿಸಿ ಒಬಿಸಿ ವಿಭಾಗದ ಸಂಚಾಲಕ ಡಾ| ಅನಿಲ್ ಜೈಹಿಂದ್ ಪ್ರತಿಕ್ರಿಯಿಸಿ, ಕಾಂಗ್ರೆಸ್‌ನಲ್ಲಿ ಹಿಂದುಳಿದ ವರ್ಗದ ಏಕೈಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಬದಲಾವಣೆ ಎಂಬುದು ಮಾಧ್ಯಮಗಳ ಕಲ್ಪನೆ ಅಷ್ಟೇ. ಅಷ್ಟಕ್ಕೂ ಈ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರ ಕೈಗೊಳ್ಳಲಿದೆ ಎಂದರು.
ಇದಕ್ಕೆ ಧ್ವನಿಗೂಡಿಸಿದ ವಿಧಾನ ಪರಿಷತ್ತಿನ ಸದಸ್ಯ ಬಿ.ಕೆ. ಹರಿಪ್ರಸಾದ್, ಈಗಾಗಲೇ 5 ವರ್ಷ ತಾವೇ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಇದಕ್ಕೆ ಪೂರಕವಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಹೇಳಿಕೆ ಕೊಟ್ಟಿದ್ದಾರೆ. ಅದು ಮುಗಿದ ಅಧ್ಯಾಯ ಎಂದು ಹೇಳಿದರು.
ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮ. ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಬ್ಬರೂ ಹೈಕಮಾಂಡ್ ನಿರ್ಧಾರಕ್ಕೆ ಬದ್ಧ. ವರಿಷ್ಠರ ಸೂಚನೆಗಳನ್ನು ಪಾಲಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.