ಮೈಸೂರು:- ಡಿ.ಕೆ.ಶಿವಕುಮಾರ್ ಸಿಎಂ ಆಗಲಿ ಎಂಬ ರಂಭಾಪುರಿ ಶ್ರೀಗಳ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಿಎಂ ಪುತ್ರ ಯತೀಂದ್ರ ಅವರು, ಸಿಎಂ ಆಗಬೇಕು ಎಂದು ಯಾರೇ ಹೇಳಿಕೆ ಕೊಟ್ಟರೂ ತಪ್ಪಲ್ಲ. ಅದನ್ನು ನಿರ್ಧಾರ ಮಾಡೋದು ಶಾಸಕರು ಮತ್ತು ಹೈಕಮಾಂಡ್. ಹೈಕಮಾಂಡ್ ಏನಾದ್ರೂ ಬದಲಾವಣೆ ಬಗ್ಗೆ ಹೇಳಿದ್ಯಾ? ಸಿಎಂ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ. ನನ್ನ ಪ್ರಕಾರ 5 ವರ್ಷ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮೈಸೂರಿನಲ್ಲಿ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ಎಐಸಿಸಿ ಓಬಿಸಿ ಸಮಿತಿ ಅಧ್ಯಕ್ಷರಾಗಿ ನೇಮಕ ಮಾಡಲಾಗಿದ್ದು, ಸೆಪ್ಟೆಂಬರ್‌ಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗೋದು ಪಕ್ಕಾ ಎಂದು ಹೇಳಲಾಗುತ್ತಿದೆ.
ಈ ನಡುವೆ ಡಿಕೆಶಿ ಪರ ಇರುವ ಶಾಸಕರು ಡಿ.ಕೆ.ಶಿವಕುಮಾರ್ ಸಿಎಂ ಆಗಲೇಬೇಕು ಎಂದು ಪದೇ ಪದೇ ಮಾಧ್ಯಮಗಳಿಗೆ ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸೆಪ್ಟೆಂಬರ್ ವೇಳೆಗೆ ಅತೀದೊಡ್ಡ ಕ್ರಾಂತಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಒಂದು ವೇಳೆ ರಾಜ್ಯದಲ್ಲಿ ಸಿಎಂ ಬದಲಾವಣೆಯಾದರೆ ಸಿದ್ದರಾಮಯ್ಯ ರಾಷ್ಟ್ರರಾಜಕಾರಣಕ್ಕೆ ಹೋಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಅವರು, ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಆಗುತ್ತಿರುವುದು ಸುಳ್ಳು. ಅದರ ಬಗ್ಗೆ ಚರ್ಚೆ ಬೇಡ. ಯಾವುದೇ ಕಾರಣಕ್ಕೂ ತಂದೆಯವರು ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದು ಸ್ಪಷ್ಟಪಡಿಸಿದರು.