ದೆಹಲಿ:- ಹೆಬ್ಬಾಳ್ಕರ್ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಸಿದ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರವಿ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ನ್ಯಾ.ಎಂ.ಎಂ. ಸುಂದ್ರೇಶ್ ಮತ್ತು ನ್ಯಾ.ರಾಜೇಶ್ ಬಿಂದಾಲ್ ಅವರ ಪೀಠವು ವಿಚಾರಣೆ ನಡೆಸಿತು.
ಅಸಂವಿಧಾನಿಕ ಪದ ಬಳಕೆ ಆರೋಪ ನಿಮಿತ್ತ ರವಿ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಬಿಎನ್ಎಸ್ 2023 ರ ಸೆಕ್ಷನ್ 75 (ಲೈಂಗಿಕ ಕಿರುಕುಳ) ಮತ್ತು ಸೆಕ್ಷನ್ 79 (ಮಹಿಳೆಯ ಘನತೆಗೆ ಧಕ್ಕೆ) ಅಡಿ ದೂರು ದಾಖಲಾಗಿತ್ತು. ಪ್ರಕರಣವನ್ನ ರದ್ದು ಮಾಡುವಂತೆ ರವಿ ಮನವಿ ಸಲ್ಲಿಸಿದ್ದರು. ಪ್ರಕರಣ ರದ್ದು ಹಾಗೂ ತಡೆಯಾಜ್ಞೆ ನೀಡಲು ಅನುಮತಿ ಸಿಗದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ಗೆ ರವಿ ಅವರು ಮೊರೆ ಹೋಗಿದ್ದರು.
ಇಂದು ವಿಚಾರಣೆ ನಡೆದಿದ್ದು, ಪ್ರಕರಣದ ವಿಚಾರಣೆಗೆ ತಾತ್ಕಾಲಿಕ ತಡೆ ನೀಡಿ ಸುಪ್ರೀಂಕೋರ್ಟ್ ಆದೇಶ ಹೊರಡಿಸಿದೆ. ಇದರಿಂದ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಂತಾಗಿದೆ.