ವಿಜಯಪುರ:- ಗಂಗಾವತಿ ವಿಧಾನಸಭೆಯ ಉಪಚುನಾವಣೆಯಲ್ಲಿ ನಾವು ಖಂಡಿತ ಗೆಲ್ಲುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅವರು ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆ ಸಾಧನಾ ಸಮಾವೇಶದ ಸಿದ್ಧತೆಗಳ ಬಗ್ಗೆ ಪರಿಶೀಲಿಸಿ ಮಾತನಾಡಿದರು.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಜಾಪ್ರಭುತ್ವದಲ್ಲಿ ಟೀಕಿಸುವುದು ಸಹಜ. ಆದರೆ, ನಮ್ಮ ಸರ್ಕಾರದ ಸಾಧನೆ, ನಮ್ಮ ಬದ್ಧತೆಯ ಬಗ್ಗೆ ಜನರಿಗೆ ತಿಳಿದೇ ತಿಳಿಯುತ್ತದೆ. 2008-2013ರವರೆಗೆ ವಿರೋಧ ಪಕ್ಷದ ನಾಯಕನಾಗಿದ್ದಾಗ ಲೋಕಾಯುಕ್ತ ನ್ಯಾ. ಸಂತೋಷ್ ಹೆಗ್ಡೆ ಅವರ ಅಕ್ರಮ ಗಣಿಗಾರಿಕೆಯ ವರದಿ ಆಧರಿಸಿ ಬೆಂಗಳೂರಿನಿಂದ ಬಳ್ಳಾರಿವರೆಗೆ ಪಾದಯಾತ್ರೆ ನಡೆಸಲಾಗಿತ್ತು.
ಅಂದು ಬಿಜೆಪಿ ಸರ್ಕಾರ ನನ್ನ ಪಾದಯಾತ್ರೆಯನ್ನು ವಿರೋಧಿಸಿತ್ತು. ಅಂದು ಅಕ್ರಮ ಗಣಿಗಾರಿಕೆ ವಿರುದ್ಧ ನಡೆಸಿದ ಹೋರಾಟಕ್ಕೆ ಇಂದು ಫಲ ದೊರೆತಿದೆ. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿರುವವರಿಗೆ ಶಿಕ್ಷೆಯಾಗಬೇಕು ಹಾಗೂ ಅಕ್ರಮ ಗಣಿಗಾರಿಕೆ ನಿಲ್ಲಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜನಾರ್ಧನ ರೆಡ್ಡಿಯವರು ಗೆಲ್ಲಲು ನಾನು ಸಹಾಯ ಮಾಡಿದ್ದೆ ಎನ್ನುವುದು ಅಪ್ಪಟ ಸುಳ್ಳು. ಜನಾರ್ಧನ ರೆಡ್ಡಿಯವರು ಬಿಜೆಪಿ ಪಕ್ಷದವರಾಗಿದ್ದು, ಅವರಿಗೆ ಸಹಾಯ ಮಾಡಲು ಹೇಗೆ ಸಾಧ್ಯ? ನಾನು ನನ್ನ ರಾಜಕೀಯ ಜೀವನದುದ್ದಕ್ಕೂ ಬಿಜೆಪಿ ಹಾಗೂ ಆರ್ ಎಸ್ ಎಸ್ ಸಿದ್ದಾಂತವನ್ನು ವಿರೋಧಿಸುತ್ತಾ ಬಂದವನು, ಈ ವರೆಗೆ ಸೈದ್ಧಾಂತಿಕವಾಗಿ ರಾಜಿಮಾಡಿಕೊಂಡವನಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.