ಬೆಂಗಳೂರು

ಬಿಜೆಪಿ ಶಾಸಕರ ಅಮಾನತು ಹಿಂಪಡೆದ ಸ್ಪೀಕರ್ ಖಾದರ್ ಫರೀದ್

ಬೆಂಗಳೂರು:- ಬಿಜೆಪಿ ಶಾಸಕರ ಅಮಾನತು ಸಂಬಂಧ ಚರ್ಚಿಸಲು ವಿಧಾನಸಭೆ ಅಧ್ಯಕ್ಷರಾದ ಯು.ಟಿ. ಖಾದರ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕಾನೂನು ಸಚಿವ ಎಚ್.ಕೆ. ಪಾಟೀಲ್, ಪ್ರತಿಪಕ್ಷ ನಾಯಕ ಆರ್.ಅಶೋಕ್, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ಬಿಜೆಪಿ ಶಾಸಕರುಗಳಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರಾಜು, ಬಿ.ಪಿ. ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ಸಿ.ಕೆ. ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ.ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ.ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್.ಆರ್.ವಿಶ್ವನಾಥ್ ಸೇರಿ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಲಾಗಿತ್ತು. ಇದೀಗ ಶಾಸಕರ ಅಮಾನತು ಆದೇಶವನ್ನು ವಾಪಸ್‌ ಪಡೆಯಲಾಗಿದೆ.

ಕಳೆದ ಮಾರ್ಚ್‌ 21ರಂದು ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಹಿನ್ನೆಲೆಯಲ್ಲಿ 18 ಬಿಜೆಪಿ ಶಾಸಕರನ್ನು 6 ತಿಂಗಳ ಕಾಲ ಸ್ಪೀಕರ್ ಯು.ಟಿ.ಖಾದರ್ ಫರೀದ್ ಅವರು ಅಮಾನತು ಮಾಡಿದ್ದರು.

ವಿಧಾನಸೌಧದಲ್ಲಿ ಮಾತನಾಡಿದ್ದ ಸ್ಪೀಕರ್‌, ಬಿಜೆಪಿಯ 18 ಶಾಸಕರ ಅಮಾನತು ಆದೇಶ ಹಿಂಪಡೆಯಲು ಚಿಂತನೆ ನಡೆದಿದೆ ಎಂದು ತಿಳಿಸಿದ್ದರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾವುದೇ ಪಕ್ಷವಿರಲಿ ಸಂವಿಧಾನ ಪೀಠಕ್ಕೆ ಗೌರವ ನೀಡಬೇಕು. ಪೀಠಕ್ಕೆ ಆಗೌರವ ನೀಡಿದ ಹಿನ್ನೆಲೆಯಲ್ಲಿ ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಅಮಾನತಾದ ಶಾಸಕರೂ ನಮ್ಮವರೇ. ಹಾಗಾಗಿ ಎಲ್ಲರೂ ಸೇರಿ ವಿಚಾರವನ್ನು ಇತ್ಯರ್ಥಗೊಳಿಸುತ್ತೇವೆ ಎಂದಿದ್ದರು.

ಇದೀಗ ಶಾಸಕರ ಅಮಾನತು ಆದೇಶ ಹಿಂಪಡೆಯುವ ನಿರ್ಧಾರ ಕೈಗೊಳ್ಳಲಾಗಿದೆ.